ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಹುಲಿಯ ಕಳೆಬರಹ ಪತ್ತೆ
1 min read
ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಹುಲಿಯೊಂದರ ಕಳೆಬರಹ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲ್ಲೂಕು ಅಂಬ್ಲಿಗೊಳ್ಳ ಜಲಾಶಯದ ಹಿನ್ನೀರಿನಲ್ಲಿ ಗಂಡು ಹುಲಿ ಶವ ಪತ್ತೆಯಾಗಿದೆ. ಹುಲಿಯ ಸಾವಿಗೆ ಕಾರಣ ಏನು ಎಂಬುದು ಸ್ಪಷ್ಟವಾಗಿಲ್ಲ. ಈ ಬಗ್ಗೆ ಸ್ಥಳೀಯರ ಮೂಲಕ ವಿಷಯ ತಿಳಿದು ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಬಳಿಕ ಹುಲಿಯ ಮರಣೋತ್ತರ ಪರೀಕ್ಷೆ ನಡೆಸಿ, ಅದರ ಕಳೆಬರವನ್ನು ಕಾನೂನಿನ ರೀತಿಯಲ್ಲಿ ವಿಲೇವಾರಿ ಮಾಡಲಾಗಿದೆ.
ಅಂಬ್ಲಿಗೋಳ ಜಲಾಶಯದ ಹಿನ್ನೀರು ಅಂಬ್ಲಿಗೊಳ್ಳವಲಯ ವ್ಯಾಪ್ತಿಯ ಆನಂದಪುರ ಹೋಬಳಿ ಬೈರಾಪುರ ಗ್ರಾಮದ ಅರಣ್ಯ ಪ್ರದೇಶದಲ್ಲಿ ವ್ಯಾಪಿಸಿರುವ ಹಿನ್ನೀರಿನಲ್ಲಿ ಹುಲಿಯ ಮೃತದೇಹ ಪತ್ತೆಯಾಗಿದೆ. ಹುಲಿಯು 8 ರಿಂದ 10 ವರ್ಷ ವಯಸ್ಸಿನದ್ದು ಎಂದು ಅಂದಾಜಿಸಲಾಗಿದೆ. ಹಿನ್ನೀರಿನಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಳೆಬರ ಪತ್ತೆಯಾಗಿದ್ದು, ನ್ಯಾಯಾಲಯದ ಅನುಮತಿ ಪಡೆದು ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳು, ಗೌತಮಪುರ ಗ್ರಾಮ ಪಂಚಾಯಿತಿ ಸದಸ್ಯರು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳ ಸಮ್ಮುಖದಲ್ಲಿ ತಾವರೆಕೊಪ್ಪ ಹುಲಿ ಮತ್ತು ಸಿಂಹಧಾಮದ ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆ ನಡೆಸಿದ್ದಾರೆ. ಹುಲಿಯ ಸಾವಿನ ನಿಖರ ಕಾರಣ ತಿಳಿಯಲು ಹುಲಿಯ ಮೃತ ದೇಹದ ಸ್ಯಾಂಪಲ್‌ಗಳನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಮೃತ ದೇಹವನ್ನು ನಿಯಮಾನುಸಾರ ದಹಿಸಲಾಯಿತು ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.
